ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
ಬೆಂಗಳೂರು,ಜ.17-ಟಫ್ ರೂಲ್ಸ್ ನಡುವೆಯೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆಯಲಿದೆ.
ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ತಗುಲಿರುವುದರಿಂದ ಅವರು ಐಸೋಲೇಟ್ ಆಗಿದ್ದಾರೆ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಮಾಡಲಾಗಿದೆ. ಇದರ ಅವಧಿ ಬುಧವಾರಕ್ಕೆ ಮುಗಿಯಲಿದ್ದು, ಮುಂದಿನ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಕಠಿಣ ನಿಯಗಳಿದ್ದರೂ ಕೊರೊನಾ ಸಂಖ್ಯೆ ಹೆಚ್ಚುತ್ತಿದ್ದು, ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.
ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇತರ ಗಣ್ಯರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.