ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕ: ಸಚಿವ ಬಿ.ಸಿ.ನಾಗೇಶ್

ಮಡಿಕೇರಿ,ಜ.26-ರಾಜ್ಯದಲ್ಲಿರುವ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಶಿಕ್ಷಣ ಸಚಿವರೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಇಂದು ಮಡಿಕೇರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕ’ ಭಾಗಕ್ಕೆ ಭಾರತ ಸಂವಿಧಾನದ ಅನುಚ್ಛೇದ 371 ಜೆ ಅನುಸಾರ 5 ಸಾವಿರ ಶಿಕ್ಷಕರು ಸೇರಿದಂತೆ ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’‌ ಅನ್ನು ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆ ತರುವ ಉದ್ದೇಶದಿಂದ ಮುಂದಿನ ವರ್ಷದಿಂದ ಕರ್ನಾಟಕದಲ್ಲಿ ಅನುಷ್ಠಾನಗೊಳಿಸುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ ಪೂರ್ವ ಪ್ರಾಥಮಿಕ ಶಾಲೆಯಿಂದ ಅಂದರೆ ‘ಪೂರ್ವ ಬಾಲ್ಯವಸ್ಥೆ ಶಿಕ್ಷಣ ಮತ್ತು ಆರೈಕೆ’ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದರು.
ಮುಂದಿನ ಶೈಕ್ಷಣಿಕ ಸಾಲಿನಿಂದ ರೈತ ವಿದ್ಯಾನಿಧಿ ಯೋಜನೆಯನ್ನು ಗ್ರಾಮೀಣ ಪ್ರದೇಶದ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೂ ವಿಸ್ತರಿಸಲಾಗುತ್ತದೆ. ರಾಜ್ಯ ಸರ್ಕಾರದಿಂದ ಜಿಲ್ಲೆಗೊಂದು ಗೋಶಾಲೆ ತೆರೆಯುವ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಗೆ 36 ಲಕ್ಷ ರೂ. ಬಿಡುಗಡೆಯಾಗಿದ್ದು, ಈಗಾಗಲೇ ಜಿಲ್ಲೆಯಲ್ಲಿ ಗೋಶಾಲೆ ಪ್ರಾರಂಭಿಸಲು ಜಾಗ ಗುರುತಿಸಲಾಗಿದ್ದು, ಗೋಶಾಲೆ ಪ್ರಾರಂಭಿಸಲು ಕ್ರಮವಹಿಸಲಾಗಿದೆ.
ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ಮುಖ್ಯ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತದೆ. ಮಕ್ಕಳು ಪರೀಕ್ಷೆ ಬರೆಯಲು ಸಿದ್ದತೆ ಮಾಡಿಕೊಳ್ಳಬೇಕು ಎಂದು ಹೇಳಿದ ಸಚಿವರು, ರೈತರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಪಡೆಯುವಂತಾಗಲು ಹೊಸದಾಗಿ ಶಿಷ್ಯವೇತನ ನೀಡಲು ಒಂದು ಸಾವಿರ ಕೋಟಿ ರೂ. ಹಣ ಮೀಸಲಿಡಲು ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ನೀಡಿದರು.

About Author

Leave a Reply

Your email address will not be published. Required fields are marked *