ಮಹಾಲಯ ಅಮಾವಾಸ್ಯೆ, ದಸರಾ ಉದ್ಘಾಟನೆ ಹಿನ್ನೆಲೆ: ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧ
ಮೈಸೂರು,ಅ.4- ಮಹಾಲಯ ಅಮಾವಾಸ್ಯೆ ಮತ್ತು ದಸರಾ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಾಳೆ (ಅ.5)ಯಿಂದ ಅ.7 ರವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ನಾಳೆ ಬೆಳಿಗ್ಗೆ 4 ಗಂಟೆಯಿಂದ ಅ.7ರ (ಗುರುವಾರ) ಮಧ್ಯಾಹ್ನದವರೆಗೂ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ.
ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಭಕ್ತರು ಬರುವ ಹಿನ್ನೆಲೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದ ಸಿದ್ಧತೆಗೆ ತೊಂದರೆ ಆಗುವ ಕಾರಣ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಆದೇಶ ಹೊರಡಿಸಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲೂ ಕೂಡ ನಿರ್ಬಂಧ ವಿಧಿಸಲಾಗಿದೆ. ಆದರೆ ಅ.7ರಂದು ನಡೆಯುವ ದಸರಾ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವವರಿಗೆ ಈ ನಿಷೇಧ ಅನ್ವಯವಾಗುವುದಿಲ್ಲ.