ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಚರಣ್ಜಿತ್ ಸಿಂಗ್ ಚನ್ನಿ ಪ್ರಮಾಣ ವಚನ ಸ್ವೀಕಾರ
1 min read
ಚಂಡೀಗಢ,ಸೆ.20-ಪಂಜಾಬ್ನ ನೂತನ ಮುಖ್ಯಮಂತ್ರಿಯಾಗಿ ಚರಣ್ಜಿತ್ ಸಿಂಗ್ ಚನ್ನಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಮುಖಂಡರಾದ ಸುಖಜಿಂದರ್ ರಾಂಧವ ಹಾಗೂ ಒಪಿ ಸೋನಿ ಕೂಡಾ ಇದೇ ಸಂದರ್ಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಮತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಉಪಸ್ಥಿತರಿದ್ದರು. ಆದರೆ, ನಿರ್ಗಮಿತ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಮಾರಂಭದಲ್ಲಿ ಗೈರಾಗಿದ್ದರು.
ಕ್ಯಾಪ್ಟನ್ ಅಮರೀಂದರ್ ಸಿಂಗ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು. ಹಿಂದಿನ ಸರ್ಕಾರದಲ್ಲಿ ತಾಂತ್ರಿಕ ಶಿಕ್ಷಣ ಸಚಿವರಾಗಿದ್ದರು. ಇದೇ ಮೊದಲ ಬಾರಿಗೆ ಪಂಜಾಬ್ನ ಚುಕ್ಕಾಣಿ ದಲಿತ ಸಮುದಾಯದ ನಾಯಕರಿಗೆ ಸಿಕ್ಕಿದೆ.
ಚಮಕೌರ್ ಸಾಹಿಬ್ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುವ ಚನ್ನಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2015-16ರಲ್ಲಿ ಚನ್ನಿ ಅವರು ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು. ಮಾರ್ಚ್ 2017ರಲ್ಲಿ ಸಿಎಂ ಅಮರಿಂದರ್ ಸಿಂಗ್ ಸಂಪುಟಕ್ಕೆ ಸೇರುವ ಮೂಲಕ ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾಗಿದ್ದರು.