ಸಂವಿಧಾನದತ್ತವಾಗಿ ಲಭ್ಯವಾಗಿರುವ ಹಕ್ಕುಗಳೊಂದಿಗೆ ಕರ್ತವ್ಯಗಳೂ ಇವೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು,ಜ.26-ಸಂವಿಧಾನದತ್ತವಾಗಿ ಲಭ್ಯವಾಗಿರುವ ಹಕ್ಕುಗಳೊಂದಿಗೆ ಕರ್ತವ್ಯಗಳೂ ಇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ 73ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಮಾತನಾಡಿದರು.

ನಮಗೆ ಬಹಳಷ್ಟು ಹಕ್ಕುಗಳನ್ನು ಸಂವಿಧಾನ ನೀಡಿದೆ. ಆ ಹಕ್ಕುಗಳನ್ನು ಪಡೆಯುವ ಅರ್ಹತೆಯನ್ನು ಸಂಪಾದಿಸುವ ರೀತಿಯಲ್ಲಿ ನಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು. ಹಕ್ಕು ಮತ್ತು ಕರ್ತವ್ಯಗಳು ಜೊತೆ ಜೊತೆಯಾಗಿ ಹೋಗಬೇಕು ಎನ್ನುವುದನ್ನು ಇಂದಿನ ಯುವಪೀಳಿಗೆಗೆ ನೆನಪು ಮಾಡಿಕೊಡುವ ದಿನವಿದು ಎಂದು ಹೇಳಿದರು.
ಪ್ರಜಾಪ್ರಭುತ್ವದ ತಳಹದಿಯ ಮೇಲೆ ದೇಶ ಗಣರಾಜ್ಯವಾಗಿದ್ದು, ರಾಜ್ಯಗಳ ಒಕ್ಕೂಟವೂ ಆಗಿದೆ. ಪ್ರತಿಯೊಂದು ರಾಜ್ಯವೂ ರಾಷ್ಟ್ರ ನಿರ್ಮಾಣದಲ್ಲಿ ಮುಂದಿರಬೇಕು. ಜನತೆಯೂ ರಾಷ್ಟ್ರ ನಿರ್ಮಾಣದತ್ತ ಗಮನ ಹರಿಸಬೇಕು. ದೇಶ ಮೊದಲು ಎನ್ನುವ ಭಾವನೆ ಇರಬೇಕು ಎಂದರು.