ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಅಧಿಕಾರಿಗಳ ವಿರುದ್ಧ ಕ್ರಮ: ಡಾ. ಸುಧಾಕರ್

ಮೈಸೂರು: ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಡ್ರಗ್ಸ್ ಕಂಟ್ರೋಲರ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಅವರು ಹೇಳಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಉಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ಔಷಧಿಗಳ ಕಾಳಸಂತೆ ಮಾರಾಟದ ಬಗ್ಗೆ ಬಿಗಿ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದರು.

ಬೆಂಗಳೂರು ಮೆಡಿಕಲ್ ಕಾಲೇಜಿನಷ್ಟೇ ಮೈಸೂರು ಮೆಡಿಕಲ್ ಕಾಲೇಜು ಶಕ್ತವಾಗಿದೆ. ಕೆ.ಆರ್.ಆಸ್ಪತ್ರೆಯಲ್ಲಿ 2000 ಹಾಸಿಗೆಗಳಿದ್ದು, ಇಲ್ಲಿನ ಆಡಳಿತ ಇನ್ನೂ ಚುರುಕಾಗಬೇಕು. 2 ರಿಂದ 3 ದಿನಗಳಲ್ಲಿ ಕೋವಿಡ್ ಚಿಕಿತ್ಸೆಗೆ 1000 ಹಾಸಿಗೆ ವ್ಯವಸ್ಥೆ ಮಾಡಬೇಕು ಎಂದರು.

ಸೋಂಕಿತರನ್ನು ಬೇಗ ಗುರುತಿಸಿದರೆ ಚಿಕಿತ್ಸೆ ನೀಡಿದರೆ ಬೇಗ ಗುಣಪಡಿಸಬಹುದು. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿತದಿಂದ ಉತ್ತಮ ಕೆಲಸ ಆಗಿದೆ. ಲಸಿಕೆಯನ್ನು ಸಹ ಹೆಚ್ಚಿನ ಸಂಖ್ಯೆಯಲ್ಲಿ ನೀಡಲಾಗಿದೆ ಎಂದರು.

ಸೋಂಕಿತ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಇರುವವರ ಪರೀಕ್ಷೆ ಮಾಡಿದರೂ ಸಾಕು, ಕೋವಿಡ್ ಹರಡುವಿಕೆ ನಿಯಂತ್ರಿಸಬಹುದು ಎಂದರು.

ಸುಮಾರು ಶೇ.95 ರಷ್ಟು ಸೋಂಕಿತರಿಗೆ ಆಸ್ಪತ್ರೆಗೆ ಸೇರಿಸುವುದೇ ಬೇಕಾಗಿಲ್ಲ. ಅವರಿಗೆ ಸೂಕ್ತ ಟೆಲಿಮೆಡಿಷನ್ ಮಾಡಿದರೆ ಮನೆಯಲ್ಲೇ ಗುಣಪಡಿಸಬಹುದಾಗಿದ್ದು, ಇದರ ಬಗ್ಗೆ ಆತಂಕ ಬೇಡ ಎಂದರು. ರೆಮ್ಡಿಸಿವಿರ್ ಮತ್ತು ಆಕ್ಸಿಜನ್ ನಿರ್ವಹಣೆಗೆ ಪ್ರತ್ಯೇಕ ಹೆಲ್ಪ್‌ಲೈನ್ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ತನ್ವೀರ್ ಸೇಠ್, ಎಲ್. ನಾಗೇಂದ್ರ, ಅಶ್ವಿನ್ ಕುಮಾರ್, ಅನಿಲ್ ಚಿಕ್ಕಮಾದು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಮ್, ಮೇಯರ್ ರುಕ್ಮಿಣಿ ಮಾದೇಗೌಡ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಎಸ್‌.ಪಿ. ಸಿ.ಬಿ. ರಿಷ್ಯಂತ್, ಜಿಲ್ಲಾ ಪಂಚಾಯತಿ ಸಿ.ಇ.ಒ. ಎ.ಎಂ. ಯೋಗೀಶ್, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *